ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯಾದ್ಯಂತ ಅ.13ರವರೆಗೆ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧೆಡೆ ಅ.10ರಿಂದ 13ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ವಾಯುಭಾರ ಕುಸಿತದ ತೀವ್ರತೆ ಅ.10ರಂದು ಮತ್ತಷ್ಟು ಹೆಚ್ಚಾಗಲಿದೆ. ನಂತರ ಗಾಳಿಯು ಪಶ್ಚಿಮ ದಿಕ್ಕಿನ ಕಡೆಗೆ ಅಂದರೆ ಅಂಡಮಾನ್ ಭಾಗದಿಂದ ಉತ್ತರ ಆಂಧ್ರಪ್ರದೇಶದ ಕರಾವಳಿಯನ್ನು ಅ.12ರಂದು ದಾಟುವ ನಿರೀಕ್ಷೆ ಇದೆ ಎಂದು ತಿಳಿಸಿದ್ದಾರೆ.
ಹವಾಮಾನದಲ್ಲಿ ಬದಲಾವಣೆ ಪರಿಣಾಮ ರಾಜ್ಯದ ಬೀದರ್, ಕಲಬುರಗಿ, ಯಾದಗಿರಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಅ. 10ರಿಂದ 12ರವರೆಗೆ ಮೂರು ದಿನ ‘ಯೆಲ್ಲೋ ಅಲರ್ಟ್’ ನೀಡಲಾಗಿದೆ. ಅ.13ರಂದು ಪುನಃ ಇದೇ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆ ಬೀಳಲಿದೆ.
ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅ.9 ರಿಂದ 13ರವರೆಗೆ ವ್ಯಾಪಕ ಮಳೆಯಾಗಲಿದೆ. ಅ.11ರಂದು ಭಾರೀ ಮಳೆಯಾಗುವ ಕಾರಣಕ್ಕೆ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಕಡೆಗಳಲ್ಲಿ ಅ. 10ರಂದು ಮಳೆ ಆಗಲಿದೆ. ಅ.11ರಂದು ಬೆಂಗಳೂರು ನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ ಸೇರಿ ಕೆಲವೆಡೆ ಮಳೆ ಪ್ರಮಾಣ ತುಸು ಹೆಚ್ಚಲಿದೆ. ಅಲ್ಲದೆ ಅ.12 ಹಾಗೂ 13 ರಂದು ಅಲ್ಲಲ್ಲಿ ಸಾಧಾರಣ ಮಳೆ ಬೀಳಲಿದೆ ಎಂದು ಅವರು ತಿಳಿಸಿದ್ದಾರೆ.
ಅ.20ಕ್ಕೆ ಹಿಂಗಾರು ಆರಂಭ: ರಾಜ್ಯದಲ್ಲಿ ಅ.20ರಿಂದ ಹಿಂಗಾರು ಮಳೆ ಆರಂಭವಾಗಲಿದೆ. ರಾಜ್ಯದ ಎಲ್ಲ ಭಾಗಗಳಲ್ಲೂ ಮುಂಗಾರು ವಾಡಿಕೆಯಷ್ಟು ಸುರಿದಿದೆ. ಆದರೆ ಹಿಂಗಾರು ಮಳೆ ಉತ್ತರ ಒಳನಾಡು ಮತ್ತು ಕರಾವಳಿ ಭಾಗಕ್ಕಿಂತ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚು ಬಿರುಸಿನಿಂದ ಕೂಡಿರಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ಹೇಳಿದ್ದಾರೆ.
ಎಲ್ಲೆಲ್ಲಿ ಎಷ್ಟು ಮಳೆ?: ಗುರುವಾರ ರಾತ್ರಿ ಹಾಗೂ ಶುಕ್ರವಾರದಂದು ಮಂಡ್ಯ ಜಿಲ್ಲೆಯ ಮದ್ದೂರು 11 ಸೆಂ.ಮೀ, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು 7, ದಕ್ಷಿಣ ಕನ್ನಡದ ಸುಬ್ರಮಣ್ಯ ಹಾಗೂ ಮೈಸೂರಿನ ಕೆ.ಆರ್.ನಗರ ತಲಾ 5, ಮೈಸೂರಿನ ನಂಜನಗೂಡು, ಶಿವಮೊಗ್ಗದ ಭದ್ರಾವತಿ, ಮಂಡ್ಯದ ಕೃಷ್ಣರಾಜನಗರ ಮತ್ತು ಮಾವಳ್ಳಿಯಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Share via
Copy link
Powered by Social Snap